ಬೆಂಗಳೂರು: .ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ "ವಾಣಿಜ್ಯ ಮೇಳ - ಸಾವಯವ ಮತ್ತು ಸಿರಿಧಾನ್ಯ - 2025" ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು.
'ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮ':
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಕೃಷಿ ಕುಟುಂಬವಾದ ನಮ್ಮ ಮನೆಯಲ್ಲೂ ಸಿರಿಧಾನ್ಯ ಬೆಳೆ ಬೆಳೆಯುತ್ತಿದ್ದೆವು, ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ.
'ಸಿರಿಧಾನ್ಯ ಉತ್ಪಾದನೆ -ಕರ್ನಾಟಕ 3ನೇ ಸ್ಥಾನ':
ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಸಿರಿಧಾನ್ಯ ಉತ್ಪಾದನೆಯಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ.
“ಸಾವಯವ ಕೃಷಿ ನೀತಿ”:
ಭಾರತದ ಒಟ್ಟು ಸಾವಯವ ರಫ್ತು ಪ್ರಮಾಣವು 2.61 ಲಕ್ಷ ಟನ್ ಆಗಿದ್ದು, ಈ ಪೈಕಿ ಸಾವಯವ ಆಹಾರ ರಫ್ತಿನಿಂದ ಸುಮಾರು 4,008 ಕೋಟಿ ರೂ.ಗಳಷ್ಟು ಆದಾಯ ಬಂದಿದೆ. ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಸರಬರಾಜು ಸರಪಳಿಯನ್ನು ಕಲ್ಪಿಸುವ ಉದ್ದೇಶದೊಂದಿಗೆ ಪರಿಷ್ಕೃತ “ಸಾವಯವ ಕೃಷಿ ನೀತಿ” ಯನ್ನು ನಮ್ಮ ಸರ್ಕಾರವು 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು”ಸಾವಯವ ಭಾಗ್ಯ ಯೋಜನೆಯನ್ನು” 2013 ನೇ ಸಾಲಿನಲ್ಲಿ ಹೊರತಂದು ಹೋಬಳಿ ಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಸ್ಥಾಪಿಸಿ ರೈತರನ್ನು ಒಗ್ಗೂಡಿಸಿ ಉತ್ತೇಜಿಸಲಾಗಿದೆ.
'ಸಂಶೋಧನಾ ಕೇಂದ್ರ':
ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ “ರೈತ ಸಿರಿ” ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಬೆಳೆಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ ರೂ. 10,000/- ಗಳಂತೆ ಗರಿಷ್ಠ 2 ಹೆಕ್ಟೇರ್ ಗಳಿಗೆ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತಿದೆ. ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ರಾಜ್ಯದ ಸಾವಯವ ಕೃಷಿಕರ ಸಂಘಗಳನ್ನು ಒಗ್ಗೂಡಿಸಿ 15 ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ರಚಿಸಲಾಗಿದೆ. ಸಾವಯವ ಹಾಗೂ ಸಿರಿಧಾನ್ಯಗಳ ಕೃಷಿಗೆ ಸಂಬಂಧಿಸಿದ ಸಂಶೋಧನಾ ಕೇಂದ್ರಗಳನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿದೆ. ಸಿರಿಧಾನ್ಯಗಳ ಉತ್ತೇಜನದಲ್ಲಿ ಕರ್ನಾಟಕ ಸರ್ಕಾರವು ಕೈಗೊಂಡಿರುವ ವಿಶೇಷ ಪ್ರಯತ್ನಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರಶಂಸನಾ ಪತ್ರವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಗೆ ನೀಡಿರುತ್ತದೆ.
'ಎಪಿಎಂಸಿ ಗಳಲ್ಲಿ ಮಾರುಕಟ್ಟೆ ವ್ಯವಸ್ಥೆ':
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿ ಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ನಮ್ಮ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.