ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಶಾಲಾಸಂಪರ್ಕ ಸೇತು ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1508 ಸೇತುವೆಗಳನ್ನು 187 .04 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

Last Updated : Jun 11, 2019, 03:38 PM IST
ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ   title=

ಬೆಂಗಳೂರು: ರಾಜ್ಯದ ರಸ್ತೆ ಅಭಿವೃದ್ಧಿಗೆಂದು ಲೋಕೋಪಯೋಗಿ ಇಲಾಖೆಗೆ ಕಳೆದ ಎರಡು ಆಯವ್ಯಯದಲ್ಲಿ 21 ಸಾವಿರ ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಮುಂದಿನ 6-7 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.  
 
ಲೋಕೋಪಯೋಗಿ ಇಲಾಖೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ನಡೆದ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾಸಂಪರ್ಕ ಸೇತು ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1508 ಸೇತುವೆಗಳನ್ನು 187 .04 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 963 ಕಾಮಗಾರಿಗಳು ಪೂರ್ಣಗೊಂಡಿವೆ, ಇನ್ನುಳಿದ ಕಾಮಗಾರಿಗಳನ್ನು 2-3 ತಿಂಗಳಿನಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.  
 
ಶಾಲೆ ಮತ್ತು ಕಾಲೇಜುಗಳ ನವೀಕರಣಕ್ಕಾಗಿ 1200 ಕೋಟಿ ರೂ.ಗಳನ್ನು ನೀಡಲಾಗಿದೆ. ಶಾಲಾ ಕಾಲೇಜುಗಳ ನವೀಕರಣವನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು. ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಅವೈಜ್ಞಾನಿಕತೆಗೆ ಅವಕಾಶ ನೀಡದೆ, ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಅನಗತ್ಯವಾಗಿ ಯೋಜನಾ ವೆಚ್ಚ ಅಧಿಕಗೊಳ್ಳುತ್ತದೆ. ಇದಕ್ಕೆ ಸಂಪೂರ್ಣ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳು ಎಚ್ಚರಿಸಿದರು.  

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗೊಳಿಸಲು ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದ ಅವರು, ಈಗಾಗಲೇ ಮುಖ್ಯ ಕಾರ್ಯದರ್ಶಿಗಳು ಇದಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲಿಸಿರುವುದಾಗಿ ತಿಳಿಸಿದರು.

ಬೆಂಗಳೂರು- ಮೈಸೂರು ಕಾರಿಡಾರ್ ನ ಶೇ.90 ರಷ್ಟು ಭೂಸ್ವಾಧೀನ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆಲಸಗಳು ಪೂರ್ಣಗೊಂಡಿವೆ. ಈ ಕಾರ್ಯಕ್ಕೆ ಇರುವ ಅಡೆತಡೆಗಳನ್ನು ಶೀಘ್ರವಾಗಿ ನಿವಾರಿಸಿ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸರ್ಕಾರದ ಪ್ರಾಮಾಣಿಕ ಆಡಳಿತಕ್ಕೆ ಅಧಿಕಾರಿಗಳ ಪ್ರಾಮಾಣಿಕತೆ ಅಗತ್ಯ:
ಸರ್ಕಾರದ ಪಾರದರ್ಶಕ ಆಡಳಿತ ನೀಡಲು ಹಾಗೂ ಗುಣಾತ್ಮಕ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಅಧಿಕಾರಿಗಳಲ್ಲಿ ಪ್ರಾಮಾಣಿಕತೆ ಅಗತ್ಯವಿದೆ.  ಮೂವತ್ತು ವರ್ಷಗಳ ನಂತರ ಲೋಕೋಪಯೋಗಿ ಇಲಾಖೆಯ ಎಲ್ಲಾ ಅಧಿಕಾರಿಗಳ ಸಭೆ ಏರ್ಪಡಿಸಲಾಗಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಇಂಜಿನಿಯರ್ ಗಳ ಪಾತ್ರ ಬಹಳ ದೊಡ್ಡದು, ಅವರು ತಮ್ಮ ಕಾರ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು  ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ ಅವರು ಮಾತನಾಡಿ,  ಒಟ್ಟು 6433 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತಾತ್ವಿಕ ಅನುಮೋದನೆಯಾಗಿದೆ. ಒಟ್ಟು 405 ಕಿ.ಮೀ. ಉದ್ದದ  4 ಹೊಸ ರಾಷ್ಟ್ರೀಯ ಹೆದ್ದಾರಿಗಳನ್ನು ಘೋಷಿಸಲಾಗಿದೆ ಎಂದು ವಿವರಿಸಿದರು. 

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಸಂಸದೀಯ ಕಾರ್ಯದರ್ಶಿ ತಿಪ್ಪೇಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಲಹೆಗಾರ ವೆಂಕಟರಾಮ್, ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್  ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Trending News