ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ-ಸಚಿವ ಕೆ.ಜೆ. ಜಾರ್ಜ್

ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

Written by - Manjunath N | Last Updated : Feb 18, 2025, 06:38 PM IST
  • ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ.
  • 7.5 ಹೆಚ್‍ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು.
  • ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ.
 ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ-ಸಚಿವ ಕೆ.ಜೆ. ಜಾರ್ಜ್ title=

ದಾವಣಗೆರೆ: ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು.

ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ; ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಇದನ್ನೂ ಓದಿ-"ಮಾರುತ" ನ ಹಾಡುಗಳಿಗೆ ಧ್ವನಿಯಾದ ಹೆಸರಾಂತ ಗಾಯಕ - ಗಾಯಕಿಯರು!

3000 ಪವರ್ ಮ್ಯಾನ್ ನೇಮಕ; ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

ಎಸ್ಕಾಂಗಳು ನಷ್ಟದಲ್ಲಿಲ್ಲ; ಇಂಧನ ಇಲಾಖೆಯಲ್ಲಿನ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ, ಆದರೆ ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ.ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಕಂಪನಿಗಳಿಗೆ ಬರಬೇಕಾದ ಹಣ ಬಾಕಿ ಇದೆ. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ಯೋಜನೆ ಇದ್ದು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಉದ್ದೇಶಿಸಿ ಇದನ್ನು ಪೈಲೆಟ್ ಕಾರ್ಯಕ್ರಮವಾಗಿ ರೂಪಿಸಲಾಗುತ್ತದೆ. ಪಂಚಾಯಿತಿಗಳು ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ್ನು ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ ಸೋಲಾರ್ ಪ್ಯಾನಲ್ ಅಳವಡಿಸಿ ಗ್ರಿಡ್‍ಗೆ ವಿದ್ಯುತ್ ನೀಡಿ ಅಷ್ಟೆ ವಿದ್ಯುತ್‍ನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ ಮತ್ತು ಪಂಚಾಯಿತಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದರು.

ವಿದ್ಯುತ್ ದರ ಪರಿಷ್ಕರಣೆ ಕೆಇಆರ್‍ಸಿಗೆ; ಎಲ್ಲಾ ಎಸ್ಕಾಂಗಳ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಕೆಇಆರ್‍ಸಿ ಮಾಡಲಿದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವ ಮೂಲಕ ದರ ಏರಿಕೆ ನಿರ್ಣಯಗಳನ್ನು ಕೆಇಆರ್‍ಸಿ ನಿರ್ಧರಿಸಲಿದೆ. ಯಾರದೂ ಕೂಡ ಹಸ್ತಕ್ಷೇಪ ಇರುವುದಿಲ್ಲ, ಕಳೆದ ವರ್ಷ ಯಾವುದೇ ವಿದ್ಯುತ್ ದರ ಏರಿಕೆ ಮಾಡಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಜ್ಯೋತಿ; ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್‍ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ನೊಂದಣಿಯಾದ 433897 ಆರ್.ಆರ್.ಸಂಖ್ಯೆಗಳಿದ್ದು ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಗೃಹಜ್ಯೋತಿಯಲ್ಲಿವೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿಯಷ್ಟು ಹಣವನ್ನು ಗ್ರಾಹಕರಿಗೆ ಸಬ್ಸಿಡಿ ನೀಡಿದ್ದು ಸರ್ಕಾರ ಇದನ್ನು ಭರಿಸಿದೆ ಎಂದರು.

ಇದನ್ನೂ ಓದಿ: "ಹೆಂಡತಿ ವರ್ಜಿನ್‌ ಆಗಿರಬೇಕು ಅಂದ್ರೆ ಸಿಂಗಲ್‌ ಆಗಿನೇ ಸಾಯ್ಬೇಕು".. ಖ್ಯಾತ ನಟಿಯ ಶಾಕಿಂಗ್‌ ಕಾಮೆಂಟ್ಸ್‌ ವೈರಲ್‌

ರೈತರಿಗೆ 7 ಗಂಟೆ ವಿದ್ಯುತ್; ರೈತರ ಕೃಷಿ ಪಂಪ್ ಸೆಟ್‍ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್‍ಸೆಟ್‍ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.

ಪಂಪ್‍ಸೆಟ್‍ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ; ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಕಸುಮ್-ಬಿ; ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ.7.5 ಹೆಚ್‍ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್‍ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್‍ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಕೆಪಿಟಿಸಿಎಲ್ ಎಂಡಿ ಪಂಕಜ್‍ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಡಾ; ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್ ಹಾಗೂ ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News