ಬೆಂಗಳೂರು : ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರಕಾರ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹರಿಹಾಯ್ದರು.
ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದರು.
ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ದಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ನೆರವಿಗೆ ಕಂಟ್ರೋಲ್ ರೂಂ: ಬಿ.ವೈ.ವಿಜಯೇಂದ್ರ
ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಟಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು, ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದಾರೆ ಎಂದರು.
ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ, ಅದು ನಿಜವೇ ಆಗಿದ್ದಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಇವರು ಮಾಡಿರುವ ಖರ್ಚು ವೆಚ್ಚ ಮತ್ತು ಹಣಕಾಸಿನ ಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಆಗ್ರಹಿಸಲಾಗುವುದು ಎಂದರು.
ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯವನ್ನು ಬೋಗಸ್ ದರ್ಶನ ಎಂದು ಲೇವಡಿ ಮಾಡಿದ ಅಶೋಕ್ ಅವರು, ನೆಟ್ಟಗೆ ಕೆಲಸ ಮಾಡದ ಮಂತ್ರಿಗಳನ್ನು ಕರೆಯಿಸಿ ಮೊದಲು ಅವರ ದರ್ಶನ ಮಾಡಬೇಕಿತ್ತು. ಯಾರ್ಯಾರು ಏನು ಕೆಲಸ ಮಾಡಿದ್ದಾರೆ ಎಂದು ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಖುರ್ಚಿ, ಮೇಜು ಹಾಕಿಸಿ ಮನವಿ ಪತ್ರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಸಿಎಂ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡಿದಿದ್ದರೆ ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಅದನ್ನು ಬಿಟ್ಟು ಸಿಎಂ ಅವರು ಸೀಮಿತ ಸಂಖ್ಯೆ ಜನರ ಅಹವಾಲು ಕೇಳಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ದಿಢೀರ್ ಎಂದು ಸಿಎಂ ಅವರು ಜನತಾದರ್ಶನ ಮಾಡುತ್ತಿದ್ದಾರೆ ಎಂದರೆ ಇವತ್ತು ದೀರ್ಘ ಕಾಲದ ನಿದ್ದೆಯಿಂದ ಎದ್ದಿದ್ದಾರೆ ಎಂದು ಅರ್ಥ. ಏಕೆಂದರೆ ಆಡಳಿತ ಸಂಪೂರ್ಣ ನೆಲಕಚ್ಚಿದ್ದು ಅಧಿಕಾರಶಾಹಿ ಜನರ ಶೋಷಣೆಯಲ್ಲಿ ನಿರತವಾಗಿದೆ. ಇದನ್ನು ಗಮನಿಸಿ ಸರಿಪಡಿಸಬೇಕಿದ್ದ ಸಚಿವರು ತೆಲಂಗಾಣ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಕ್ರಾಂತಿ ಆಗಿದೆ ಎಂದು ಬುರುಡೆ ಭಾಷಣ ಬಿಗಿಯುತ್ತಿದ್ದಾರೆ. ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಡಿದಿರುವ ಬರಗಾಲ ನಿವಾರಣೆಗಾಗಿ ಸಿದ್ದರಾಮಯ್ಯ ಎಲ್ಲಾ ಸಚಿವರನ್ನು ಅಲ್ಲಿಗೆ ನಿಯೋಜಿಸಿದ್ದಾರೆ. ಇಲ್ಲಿ ಜನ ತತ್ತರಿಸುತ್ತಿದ್ದರೂ ಕೇಳುವವರು ದಿಕ್ಕಿಲ್ಲ ಎಂದು ಕಿಡಿಕಾರಿದರು.
ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ, ಅವರು ಈಗಾಗಲೇ ಮೂರು ಪಕ್ಷಗಳಿಗೆ ಪಕ್ಷಾಂತರ ಮಾಡಿದ್ದಾರೆ. ಹೀಗಾಗಿ ಪಕ್ಷಗಳ ಸಂಸ್ಥಾಪಕ ಅಧ್ಯಕ್ಷರು ಯಾರ್ಯಾರು ಎಂಬುದನ್ನೇ ತಿಳಿದುಕೊಂಡಿಲ್ಲ. ಕಾಂಗ್ರೆಸ್ ಸ್ಥಾಪಕ ಅಧ್ಯಕ್ಷ ಬ್ರಿಟಿಷ್ ಎಂಬುದೂ ಗೊತ್ತಿಲ್ಲ. ಅವರ ಪರಂಪರೆಯೇ ಕಾಂಗ್ರೆಸ್ ನಲ್ಲಿ ಮುಂದುವರೆಯುತ್ತಿದೆ. ಯುಪಿಎ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರಿಗೆ ಕಾಸು ಕೊಟ್ಟು ಕಲ್ಲು ಹೊಡೆಸುತ್ತಿದ್ದರು. ಅವರೆಲ್ಲರೂ ಈಗ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಜನಜೀವನ ಸಹಜಸ್ಥಿತಿಗೆ ಮರಳಿದೆ. ಇದಕ್ಕೆ ಮೋದಿ ಸರಕಾರದ ಕಠಿಣ ಕ್ರಮಗಳು ಕಾರಣ ಎಂದು ಅಶೋಕ್ ವಿವರಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.